ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೋ ಪ್ರಕರಣ ಹೈಕೋರ್ಟ್ ಅಂಗಳದಲ್ಲಿ ಮಹತ್ವದ ಘಟ್ಟ ತಲುಪಿದೆ. ಸ್ವಾಮೀಜಿಗೆ ಕೆಳ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ದೂರು ದಾಖಲಾಗುವ ಹಿಂದಿನ ದಿನವೇ ಜಾಮೀನು ಪಡೆದಿದ್ದ ಶ್ರೀಗಳ ನಡೆಗೆ ಹೈಕೋರ್ಟ್ ಈಗಾಗಲೇ ಆಘಾತ ವ್ಯಕ್ತಪಡಿಸಿದ್ದು, ಇಂದು ಸ್ವಾಮೀಜಿಯವರ ಅಸಲಿ ಭವಿಷ್ಯ ನಿರ್ಧಾರವಾಗಲಿದೆ.ಹೌದು, ಇಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಪಾಲಿಗೆ ಬಿಗ್ ಡೇ. ಯಾಕಂದ್ರೆ, ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ಶ್ರೀಗಳಿಗೆ ಕೆಳ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್ ಮೊರೆ ಹೋಗಿದ್ದು, ಇಂದು ಆ ಅರ್ಜಿ ವಿಚಾರಣೆಗೆ ಬರಲಿದೆ. ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಪ್ರಕರಣದ ವಿಚಾರಣೆ ನಡೆಸಲಿದೆ.



