ಬೆಂಗಳೂರು: ಈ ತಿಂಗಳ 4ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಜಂಟಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿವೆ.
ಈ ಸಂಬಂಧ ಜೆಡಿಎಸ್ನ ಶಾಸಕಾಂಗ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.ಶುಕ್ರವಾರ ನಗರದ ರೇಸ್ಕೋರ್ಸ್ ರಸ್ತೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ನಿವಾಸದಲ್ಲಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಉಭಯ ಪಕ್ಷಗಳ ಇತರೆ ನಾಯಕರು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.
ಈ ವೇಳೆ ಸರ್ಕಾರದ ವಿರುದ್ಧ ಯಾವೆಲ್ಲಾ ವಿಷಯಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಬೇಕು ಮತ್ತು ಹೋರಾಟದ ರೂಪುರೇಷೆ ಹೇಗಿರಬೇಕು ಎಂಬುದರ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವೈಫಲ್ಯ, ಬರ ನಿರ್ವಹಣೆಯಲ್ಲಿ ವಿಫಲವಾಗಿರುವುದು, ಗುತ್ತಿಗೆದಾರರಿಂದ ಕಮೀಷನ್ ಪಡೆಯುತ್ತಿರುವ ಆರೋಪ, ಗುತ್ತಿಗೆದಾರರ ಆತ್ಮಹತ್ಯೆ- ಸಾವು ಪ್ರಕರಣಗಳು, ಶಾಸಕರಿಗೆ ಅನುದಾನ ಬಿಡುಗಡೆ ಮಾಡದಿರುವುದು, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲದಿರುವುದು ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರ ವಿರುದ್ಧ ಸದನದಲ್ಲಿ ಹೋರಾಟ ನಡೆಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಬಿಜೆಪಿ ಶಾಸಕರು ಕೈ ಮುಗಿದು ಗೌರವ ಕೊಡುವಂತೆ ಮಾಡಿದ್ದೇವೆ ಎಂದು ವಸತಿ ಸಚಿವ ಜಮೀರ್ ಅಹಮದ್ ಅವರು ತೆಲಂಗಾಣ ಚುನಾವಣಾ ಪ್ರಚಾರ ಸಮಯದಲ್ಲಿ ನೀಡಿದ್ದ ಹೇಳಿಕೆ ಕುರಿತು ಸದನದಲ್ಲಿ ಪ್ರಸ್ತಾಪಿಸಿ ಕ್ಷಮೆಯಾಚನೆಗೆ ಪಟ್ಟುಹಿಡಿಯುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಒಟ್ಟಾರೆ ಈ ಬಾರಿಯ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು. ಅದಕ್ಕಾಗಿ ಒಟ್ಟಾಗಿ ಹೋರಾಟ ಮಾಡಬೇಕು. ವಿಷಯಗಳ ಮೇಲಿನ ಚರ್ಚೆಯ ವೇಳೆ ಪರಸ್ಪರ ಸಹಕಾರ ಕೊಟ್ಟು ಸರ್ಕಾರದ ವಿರುದ್ಧ ನಿಲ್ಲಬೇಕು ಎನ್ನುವ ಕುರಿತು ಮಾತುಕತೆ ನಡೆದಿದೆ ಎನ್ನಲಾಗಿದೆ.
ಪ್ರತಿದಿನ ಕಲಾಪದ ವೇಳೆ ಒಂದಲ್ಲ ಒಂದು ವಿಷಯದ ಮೇಲೆ ನಿಲುವಳಿ ಸೂಚನೆ ಮೇಲೆ ಉಭಯಪಕ್ಷಗಳವರು ಜಂಟಿಯಾಗಿ ಚರ್ಚೆಗೆ ಅವಕಾಶ ಕೋರಿ ಸಭಾಧ್ಯಕ್ಷರನ್ನು ಮನವಿ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಒಟ್ಟಾರೆ ಈ ಬಾರಿಯ ಬೆಳಗಾಂನಲ್ಲಿ ನಡೆಯುವ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಸಮರವೇ ಹೆಚ್ಚಾಗಿ ನಡೆಯುವ ಸಾಧ್ಯತೆಗಳಿವೆ.