ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಅತೀಶೀಘ್ರದಲ್ಲೇ ವಿಸ್ತರಣೆಯಾಗಲಿದೆ. ಈವಾರ ಅಥವಾ ಮುಂದಿನ ವಾರದಲ್ಲಿ ಮುಖ್ಯಮಂತ್ರಿಯವರು ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ಲಭ್ಯವಾಗುವ ಸಮಯ ನೋಡಿ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಮೊದಲ ಬಾರಿಗೆ 13 ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದ್ದು, ಇನ್ನು 20 ಸಚಿವ ಸ್ಥಾನ ಖಾಲಿ ಉಳಿದಿವೆ. ರಾಜ್ಯಸರ್ಕಾರದ ಅವಧಿ 18ತಿಂಗಳು ಉಳಿದಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟವನ್ನು ಶೀಘ್ರ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಈಗಾಗಲೇ 20 ಸಚಿವ ಸ್ಥಾನಕ್ಕೆ ಸುಮಾರು 60ಕ್ಕೂ ಹೆಚ್ಚು ಮಂದಿ ಶಾಸಕರು ಆಕಾಂಕ್ಷಿಗಳಾಗಿದ್ದು, ಪಕ್ಷದ ವರಿಷ್ಠರನ್ನು ಸಚಿವ ಪದವಿ ದೊರಕಿಸಿ ಕೊಡುವಂತೆ ಮನವಿ ಮಾಡುತ್ತಿದ್ದಾರೆ.
ಇಂದು ಬೆಳಿಗ್ಗೆ ಸಹ ಬಾಗಲಕೋಟೆ ಜಿಲ್ಲೆಯ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶ್ಯಪ್ನವರ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿಯಾಗಿ ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದಾರೆ.
ಆಕಾಂಕ್ಷಿಗಳ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಮಂತ್ರಿಮAಡಲವನ್ನು ಭರ್ತಿ ಮಾಡಲು ಮುಖ್ಯಮಂತ್ರಿಯವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಸಿದ್ದರಾಮಯ್ಯ ಸರ್ಕಾರದ ಸಂಪುಟದಲ್ಲಿ ಮಂತ್ರಿಯಾಗಿದ್ದವರು ಎರಡು ಮೂರು ಬಾರಿ ಗೆದ್ದಿರುವವರು ಮೊದಲ ಬಾರಿ ವಿಧಾನಸಭೆಗೆ ಪ್ರವೇಶಿಸಿದವರು ಸೇರಿದಂತೆ ಇನ್ನೂ ಅನೇಕ ಮಂತ್ರಿ ಸಚಿವಾಕಾಂಕ್ಷಿಗಳಾಗಿದ್ದಾರೆ.



