ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ನಗರದ ತೋಟಗಾರಿಕಾ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಳಿಗ್ಗೆ ೮ ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಸಿಸಿಟಿವಿ ಕಣ್ಗಾವಲು ಇರಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಏಜೆಂಟ್ಗಳನ್ನು ತಪಾಸಣೆ ಮಾಡಿ ಒಳಗೆ ಬಿಡಲಾಗಿದೆ.
ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಹಾಗೂ ಎಲೆಕ್ಟಾçನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಮಾಧ್ಯಮದವರಿಗೂ ಚುನಾವಣಾಧಿಕಾರಿಗಳು ನಿಷೇಧ ಹೇರಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ೨೪೮ ಮತಗಳ ಅಂತರದಿಂದ ಕಾಂಗ್ರೆಸ್ನ ಕೆ.ವೈ. ನಂಜೇಗೌಡ ಜಯಗಳಿಸಿದ್ದರು. ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮರು ಮತ ಎಣಿಕೆ ನಡೆಯುತ್ತಿದೆ.



