ಬೆಂಗಳೂರು: ಭಾರಿ ಅಕ್ರಮ ನಡೆದಿದ್ದ ಪಿಎಸ್ಐ ಹುದ್ದೆಗಳ ಮರುಪರೀಕ್ಷೆಯು ಇಂದು ರಾಜಧಾನಿಯಲ್ಲಿ ನಡೆದಿದ್ದು, ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಬೆಂಗಳೂರಿನ 117 ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ನಡೆದಿದ್ದು, ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ನಡೆಯಲಿದೆ.54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಆಸ್ಪದ ಕೊಡಬಾರದೆಂಬ ಕಾರಣಕ್ಕೆ ಭಾರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ನಾಲ್ವರು ಸಶಸ್ತ್ರ ಪೇದೆಗಳು ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ 6 ಮಂದಿಯನ್ನು ನಿಯೋಜಿಸಲಾಗಿದೆ. 40 ಬೆಟಾಲಿಯನ್ ಪೊಲೀಸರನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ.
545 ಮಂದಿ ಪಿಎಸ್ ಐ ಹುದ್ದೆಗಳಿಗಾಗಿ ಮರು ಪರೀಕ್ಷೆ ನಡೆಯುತ್ತಿದ್ದು, ಪೊಲೀಸ್ ಇಲಾಖೆ ಹಾಗೂ ಕೆಇಎ ನಿಗಾ ಇಟ್ಟಿವೆ. ಪರೀಕ್ಷಾ ಕೇಂದ್ರಗಳ ಸುತ್ತ ಅನುಮಾನಾಸ್ಪದವಾಗಿ ಓಡಾಡುವವರು, ಗಾಳಿಸುದ್ದಿ ಹಬ್ಬಿಸುವ ಕಿಡಿಗೇಡಿಗಳು ಮತ್ತು ಜೆರಾಕ್ಸ್ ಅಂಗಡಿಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನೂ ಲೋಹಶೋಧಕ ಯಂತ್ರದ ಮೂಲಕ ತಪಾಸಣೆ ನಡೆಸಲಾಗುತ್ತಿದೆ.
ಅಭ್ಯರ್ಥಿಗಳು ವಸ್ತ್ರ ಸಂಹಿತೆಯಲ್ಲಿನ ಸೂಚನೆಗಳನ್ನು ಪಾಲಿಸುವುದು ಕಡ್ಡಾಯ ಮಾಡಲಾಗಿದ್ದು, ಜೀನ್ಸ್ಪ್ಯಾಂಟ್, ಫುಲ್ ತೋಳಿನಲ್ಲಿ ಶರ್ಟ್ ಧರಿಸಿ ಬಂದವರಿಗೆ ಪರೀಕ್ಷಾ ಕೇಂದ್ರಕ್ಕೆ ನಿರ್ಬಂಧ ಹೇರಲಾಗಿದೆ. ಎಲೆಕ್ಟ್ರಾನಿಕ್ ಸಾಧನಗಳು, ಮೊಬೈಲ್ ನಿಷೇಧಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈಗಾಗಲೇ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.