ಚಾಮರಾಜನಗರ: ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತವಾಗಿ ಅಧಿಕಾರಿಗಳು ಸ್ಪಂದಿಸಿ ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣಗಳ ಮೇಲಿನ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಾದ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡಗಳ ಜನತೆಗೆ ತುರ್ತಾಗಿ ಸ್ಪಂದಿಸಬೇಕು. ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ 2018ರಲ್ಲಿ ವಿಷಪ್ರಸಾದ ಸೇವಿಸಿ ಸಂತ್ರಸ್ತರಾದ ಜನರ ಆರೋಗ್ಯ ತಪಾಸಣೆಯನ್ನು ಜನವರಿ ಮೊದಲ ವಾರದಲ್ಲಿ ಏರ್ಪಡಿಸಬೇಕು.
ದೀರ್ಘಾವಧಿ, ಅಲ್ಪಾವಧಿ ಆರೋಗ್ಯ ಸಮಸ್ಯೆಗಳು ಇದ್ದಲ್ಲಿ ಚಿಕಿತ್ಸೆಗೆ ಮುಂದಾಗಬೇಕು. ತಜ್ಞ ವೈದ್ಯರು, ಸಿಬ್ಬಂದಿಯನ್ನು ಕರೆದೊಯ್ದು ಬೃಹತ್ ತಪಾಸಣಾ ಶಿಬಿರ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.ಮುರಟಿಪಾಳ್ಯ ಗ್ರಾಮದಲ್ಲಿ 18 ಜನರಿಗೆ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿರುವ ಸಂಬಂಧ ಪರಿಶೀಲಿಸಿ ವರದಿ ನೀಡಲು ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಯವರು ಈ ಸಂಬಂಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.
ತೆರಕಣಾಂಬಿ ಹೋಬಳಿಯ ಉಪಕಾರ ಕಾಲೋನಿಯಲ್ಲಿ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ ಜಮೀನು ಮಂಜೂರು ಮಾಡಿ ನೀಡಿದ್ದರೂ ಸಂಬಂಧಪಟ್ಟವರ ಹೆಸರಿಗೆ ಹಂಚಿಕೆ ಮಾಡದಿರುವ ಪ್ರಕರಣದಲ್ಲಿ ತಕ್ಷಣವೇ ಕ್ರಮ ವಹಿಸಬೇಕು. ಸೋಲಿಗರಿಗೆ ವಸತಿ ಸೌಲಭ್ಯ ಕಲ್ಪಿಸಲು ಗ್ರಾಮ ಪಂಚಾಯಿತಿಗಳಲ್ಲಿ ಆದ್ಯತೆ ನೀಡಬೇಕು.
ಈ ನಿಟ್ಟಿನಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳು ಅಗತ್ಯ ಕ್ರಮಕ್ಕೆ ಮುಂದಾಗಬೇಕು ಎಂದುಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಸಲಹೆಯಂತೆ ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗಗಳ ಪ್ರಕರಣ ಸಂಬಂಧ ವಿಶೇಷ ನ್ಯಾಯಾಲಯ ಸ್ಥಾಪನೆ, ವಿಶೇಷಪಬ್ಲಿಕ್ ಪ್ರಾಸಿಕ್ಯೂಟರ್ ನಿಯೋಜನೆ, ಅರಣ್ಯಇಲಾಖೆಯಲ್ಲಿ 10 ವರ್ಷಗಳ ಕಾಲ ದಿನಗೂಲಿಯಾಗಿ ಕೆಲಸ ನಿರ್ವಹಿಸಿದ ಅರಣ್ಯ ವಾಸಿಗಳನ್ನು ಖಾಯಂಗೊಳಿಸುವ ತಮಿಳುನಾಡು ರಾಜ್ಯದ ಆದೇಶ ಇಲ್ಲೂ ಪಾಲನೆ ಯಾಗಬೇಕೆಂಬ ಸಮಿತಿಯ ಪ್ರಸ್ತಾವನೆಯನ್ನು ಕಳುಹಿಸಿಕೊಡಲಾಗುವುದೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಮಾತನಾಡಿ ಪರಿಶಿಷ್ಟಜಾತಿ, ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತವಾಗಿ ಪರಿಹಾರ ಒದಗಿಸಬೇಕಿದೆ. ದಾಖಲಾಗುವ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳಿಗೆ ಮುಂದಾಗಬೇಕಿದೆ ಎಂದರು.
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಸಿದ್ದರಾಜು, ಸೋಮೇಶ್ವರ, ಆಸಿಫ್ ಉಲ್ಲಾ, ಗುಂಡ್ಲುಪೇಟೆ ಸಿದ್ದರಾಜು, ಮುದ್ದಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ತಹಶೀಲ್ದಾರ್ ಬಸವರಾಜು, ಮಂಜುಳಾ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.