ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಪಾದದ ನೋವಿನಿಂದ ಬಳಲುತ್ತಿದ್ದ ಶಮಿ ಇದೀಗ ಸರ್ಜರಿ ಮಾಡಿಸಿಕೊಂಡಿದ್ದಾರೆ. ಹೀಗಾಗಿ ಮುಂಬರುವ ಐಪಿಎಲ್ನಿಂದ ಅವರು ಹೊರಗುಳಿಯುವುದು ಖಚಿತವಾಗಿದೆ. ಏಕದಿನ ವಿಶ್ವಕಪ್ ವೇಳೆ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು.
ಈ ನೋವಿನ ನಡುವೆಯೂ ಶಮಿ ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿದೆ. ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡುವಂತೆ ಸಲಹೆ ನೀಡಲಾಗಿತ್ತು.
ಅದರಂತೆ ಇದೀಗ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದಾರೆ.ನನ್ನ ಅಕಿಲ್ಸ್ ಸ್ನಾಯುರಜ್ಜು ಮೇಲೆ ಯಶಸ್ವಿ ಹೀಲ್ ಆಪರೇಷನ್ ಮಾಡಲಾಗಿದೆ. ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಮೊಹಮ್ಮದ್ ಶಮಿ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.
ಇದರೊಂದಿಗೆ ಮುಂಬರುವ ಐಪಿಎಲ್ನಲ್ಲಿ ಮೊಹಮ್ಮದ್ ಶಮಿ ಗುಜರಾತ್ ಟೈಟಾನ್ಸ್ ತಂಡದ ಪರ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಹಾಗೆಯೇ ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್ಗೂ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.