ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಆಂಗ್ಲರ ನಾಡಿನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ನಾಯಕನಾಗಿ ಇಂಗ್ಲೆಂಡ್ ವಿರುದ್ಧ ಆಡಿದ ಮೊದಲ ಟಿ20 ಪಂದ್ಯದಲ್ಲೇ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಅಯ್ಯರ್ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ. ಚೆಸ್ಟರ್-ಲೆ-ಸ್ಟ್ರಿಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೇವಲ 6 ರನ್ ಗಳಿಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಕ್ರೀಸ್ಗೆ ಆಗಮಿಸಿದ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಭರ್ಜರಿ ಬ್ಯಾಟಿಂಗ್ ನೊಂದಿಗೆ ಶ್ರೇಯಸ್ ಅಯ್ಯರ್ ಕೇವಲ 38 ಎಸೆತಗಳಲ್ಲಿ ನಾಯಕನಾಗಿ ಚೊಚ್ಚಲ ಅರ್ಧಶತಕ ಪೂರೈಸಿದರು. ಈ ಹಾಫ್ ಸೆಂಚುರಿಯೊಂದಿಗೆ ಇಂಗ್ಲೆಂಡ್ ನಲ್ಲಿ ಅರ್ಧಶತಕ ಸಿಡಿಸಿದ ಭಾರತ ಟಿ20 ತಂಡದ ಮೊದಲ ನಾಯಕನೆಂಬ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಅಷ್ಟೇ ಅಲ್ಲದೆ ಇಂಗ್ಲೆಂಡ್ ವಿರುದ್ಧ ಆಂಗ್ಲರ ನಾಡಿನಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ಕ್ಯಾಪ್ಟನ್ ಎಂಬ ದಾಖಲೆಯನ್ನು ಕೂಡ ತಮ್ಮ ಹೆಸರಿಗೆ ಸೇರಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. 2018 ರಲ್ಲಿ ಕಾರ್ಡಿಫ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 47 ರನ್ ಗಳಿಸಿದ್ದು ಭಾರತೀಯ ನಾಯಕನ ಶ್ರೇಷ್ಠ ಸಾಧನೆಯಾಗಿತ್ತು. ಆದರೆ ಆಂಗ್ಲರ ನಾಡಿನಲ್ಲಿ ನಾಯಕನಾಗಿ ಕಣಕ್ಕಿಳಿದ ಮೊದಲ ಪಂದ್ಯದಲ್ಲೇ ಅಬ್ಬರಿಸಿದ ಶ್ರೇಯಸ್ ಅಯ್ಯರ್ 47 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ ಗಳೊಂದಿಗೆ 68 ರನ್ ಚಚ್ಚಿದರು. ಈ ಮೂಲಕ ಇಂಗ್ಲೆಂಡ್ನಲ್ಲಿ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಮೊದಲ ಭಾರತೀಯ ನಾಯಕ ಹಾಗೂ ಗರಿಷ್ಠ ವೈಯುಕ್ತಿಕ ಸ್ಕೋರ್ ಕಲೆಹಾಕಿದ ಟೀಮ್ ಇಂಡಿಯಾ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ.



