ಬೆಂಗಳೂರು: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭಗೊಂಡಿರುವ ಬೆನ್ನಲ್ಲೇ ಪಕ್ಷಾಂತರ ಪರ್ವವು ಬಿರುಸಿನಿಂದ ನಡೆಯುವ ಲಕ್ಷಣಗಳು ಗೋಚರವಾಗುತ್ತಿವೆ.
ಈಗಾಗಲೇ ಕೆಲ ಮುಖಂಡರು ಪಕ್ಷಾಂತರ ಮಾಡಿರುವ ಬೆನ್ನಲ್ಲಿಯೇ ಮಾಜಿ ಸಂಸದ ಹಾಗೂ ಬಿಜೆಪಿಯಲ್ಲಿ ಇದುವರೆಗೂ ಗುರುತಿಸಿಕೊಂಡಿರುವ ಎಸ್.ಪಿ. ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಹಿನ್ನೆಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದ ಪರಿಣಾಮ ಕಾಂಗ್ರೆಸ್ನಲ್ಲಿದ್ದ ಮುದ್ದಹನುಮೆಗೌಡರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ.
ತದನಂತರ ಕಳೆದ ವಿಧಾನಸಭಾಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಸಿಗುವುದು ದುರ್ಲಬ ಎಂದು ಅರಿತು ಬಿಜೆಪಿಯತ್ತ ಮುಖ ಮಾಡಿದ್ದ ಗೌಡರು ಇದೀಗ ತುಮಕೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗುವುದು ಸಾಧ್ಯವಾಗದ ಮಾತು ಎಂದು ಅರಿತು ಪುನಃ ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ.ಇಂದು ಸಂಜೆ 4 ಗಂಟೆಗೆ ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ಮುದ್ದಹನುಮೇಗೌಡರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.