ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸರು ಕ್ರೀಡೆಯಲ್ಲಿ ಇಡೀ ದೇಶಕ್ಕೆ ರಾಷ್ಟ್ರೀಯ ಮಟ್ಟದ ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡೆಗಳಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಲು ಬಹಳ ಸಂತೋಷವಾಗುತ್ತಿದೆ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಎಸ್. ಮರಿ ಸ್ವಾಮಿ ಹೇಳಿದ್ದಾರೆ.
ಇಂದು ಬೆಳಿಗ್ಗೆ ಕೆಎಸ್ಆರ್ಪಿ ಕೋರಮಂಗಲ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಪೊಲೀಸ್ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆ ಎಂಬುದು ಸೋಲು ಮತ್ತು ಗೆಲುವಿನ ಸಂಕೇತ ಎಂದಿದ್ದಾರೆ.
ನಮ್ಮ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಮತ್ತು ಉತ್ತಮ ಮನೋಭಾವ ಬೆಳೆಸಿಕೊಳ್ಳಲು ಬಹಳ ಸಹಕಾರಿಯಾಗಿರುತ್ತದೆ.
ಕರ್ನಾಟಕ ರಾಜ್ಯ ಪೊಲೀಸ್ ಅಕಾಡೆಮಿಯಿಂದ ದೇಶದಲ್ಲಿ ಸುಮಾರು 15 ಕಡೆ ವಿವಿಧ ಬಗೆಯ ಕ್ರೀಡೆ ಹಾಗೂ ಇತರೆ ತರಬೇತಿಗಳನ್ನು ಸಹ ನೀಡುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ತಮ್ಮ ಭಾಷಣದಲ್ಲಿ ವ್ಯಕ್ತಪಡಿಸಿದ್ದಾರೆ.
ಕ್ರೀಡೆ ಎಂಬುದು ಖಾಕಿ ಧರಿಸಿರುವ ಪ್ರತಿಯೊಬ್ಬ ವ್ಯಕ್ತಿಗೂ ಅನ್ವಯಿಸುತ್ತದೆ. ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕ್ರೀಡಾಪಟುಗಳಿಗೆ ಒದಗಿಸಿ ಇನ್ನು ಹೆಚ್ಚಿನ ಸಾಧನೆ ಮಾಡಿ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಹೆಚ್ಚಿನ ಗೌರವ ತಂದು ಕೊಡಲೆಂದು ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹಾರೈಸುತ್ತೇನೆ ಎಂದು ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಹಾಗೂ ಕೆಎಸ್ಆರ್ಪಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸಿಮಂತ್ ಕುಮಾರ್ ಸಿಂಗ್ ಮತ್ತು ನಗರ ಪೊಲೀಸ್ ಆಯುಕ್ತ ದಯಾನಂದ ಸೇರಿದಂತೆ ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.