ಬೆಂಗಳೂರು: ರಾಜ್ಯಸಭೆಗೆ ನಡೆಯಲಿರುವ ನಾಲ್ಕು ಸ್ಥಾನಗಳ ಚುನಾವಣೆಗೆ ಸಂಬಂಧಪಟ್ಟಂತೆ ಗೆಲುವಿಗಾಗಿ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳು ತೀವ್ರ ತಂತ್ರಗಾರಿಕೆ ರೂಪಿಸುವಲ್ಲಿ ನಿರತವಾಗಿವೆ.
ನಾಳೆ ಬೆಳಿಗ್ಗೆ ಮತದಾನ ಆರಂಭ ವಾಗಲಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಜೆಡಿಎಸ್ ಮುಖಂಡರಿಗೆ ತಮ್ಮ ಪಕ್ಷದ ಶಾಸಕರು ಅಡ್ಡ ಮತದಾನ ಮಾಡಬಹುದು ಎಂಬ ಭೀತಿ ಎದುರಾಗಿದ್ದು, ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಎಲ್ಲಾ ಪಕ್ಷದವರು ತೀವ್ರ ಕಸರತ್ತು ನಡೆಸಿದ್ದಾರೆ.
ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳಿಗೆ ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮೂವರ ಗೆಲುವಿಗಾಗಿ ಕಾಂಗ್ರೇಸ್ನಿಂದ ತೀವ್ರ ತಂತ್ರಗಾರಿಕೆ ಹೆಣೆಯಲಾಗುತ್ತಿದೆ.ಇಂದು ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಗೆ ಆಗಮಿಸುವರ ಶಾಸಕರನ್ನು ನಗರದ ಹೊರ ವಲಯದಲ್ಲಿರುವ ಖಾಸಗಿ ಹೋಟೆಲ್ನಲ್ಲಿಯೇ ತಂಗಲು ವ್ಯವಸ್ಥೆ ಮಾಡಲಾಗಿದೆ.
ನಾಳೆ ಬೆಳಿಗ್ಗೆ ಶಾಸಕರು ನೇರವಾಗಿ ತಾವಿರುವ ಹೋಟೆಲ್ನಿಂದಲೇ ನೇರವಾಗಿ ಮತದಾನಕ್ಕೆ ಮತಚಲಾಯಿಸಲು ವಿಧಾನಸೌಧಕ್ಕೆ ಆಗಮಿಸಲು ವ್ಯವಸ್ಥೆ ಮಾಡಲಾಗಿದೆ.ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ವತಿಯಿಂದ ಇಬ್ಬರು ಅಭ್ಯರ್ಥಿಗಳನ್ನುಕಣಕ್ಕಿಳಿಸಿದ್ದು, ಇಬ್ಬರನ್ನು ಗೆಲ್ಲಿಸಿಕೊಳ್ಳಲು ತೆರೆಮರೆಯಲ್ಲಿ ತಂತ್ರಗಾರಿಕೆ ರೂಪಿಸಲಾಗಿದೆ.
ತಮ್ಮ ಅಭ್ಯರ್ಥಿಗಳ ಗೆಲುವಿಗೆ ಬಿಜೆಪಿ ಜೆಡಿಎಸ್ನವರು ಯಾವ ತಂತ್ರ ರೂಪಿಸುತ್ತಿದ್ದಾರೆ ಎಂಬುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.ಜೆಡಿಎಸ್ ಪಕ್ಷದಿಂದ ಕಣಕ್ಕಿಳಿದಿರುವ ಕುಪೇಂದ್ರರೆಡ್ಡಿ ಅವರ ಗೆಲುವಿಗಾಗಿ ಜೆಡಿಎಸ್ ವರಿಷ್ಠರು ಬಿಜೆಪಿ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ತಮ್ಮ ಅಭ್ಯರ್ಥಿ ಗೆಲುವಿಗಾಗಿ ತಂತ್ರಗಾರಿಕೆ ರೂಪಿಸುತ್ತಿದ್ದಾರೆ.