ದೆಹಲಿ: ನಿನ್ನೆಯ ಭದ್ರತಾ ಲೋಪದ ಘಟನೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸಂಸದರ ಘೋಷಣೆಗಳ ನಡುವೆ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ನಿನ್ನೆ ಲೋಕಸಭೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ಸಂಸದರು ಒತ್ತಾಯಿಸಿದ ಪರಿಣಾಮ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ನಿನ್ನೆ ಸದನದಲ್ಲಿ ಏನಾಯಿತು ಎಂಬುದರ ಬಗ್ಗೆ ನಮಗೆಲ್ಲರಿಗೂ ಕಳವಳವಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು.
ಸದನದ ಭದ್ರತೆಯು ಲೋಕಸಭೆಯ ಸೆಕ್ರೆಟರಿಯೇಟ್ನ ಜವಾಬ್ದಾರಿಯಾಗಿದೆ. ಸಂಸತ್ತಿನ ಭದ್ರತಾ ಉಲ್ಲಂಘನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ಸದನಗಳಲ್ಲಿ ಇದೇ ವಿಷಯದ ಬಗ್ಗೆ ಚರ್ಚೆ ನಡೆದು, ಪ್ರತಿಪಕ್ಷದ ಸದಸ್ಯರು ಭದ್ರತಾ ಲೋಪಕ್ಕೆ ಸಂಬಂಧಪಟ್ಟಂತೆ ಅಮಿತ್ಶಾ ಅವರು, ವಿವರಣೆ ನೀಡಬೇಕು. ಇದರ ಹೊಣೆಹೊತ್ತು ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದ ಪರಿಣಾಮ ಗದ್ದಲ ಕೋಲಾಹಲದ ಪರಿಸ್ಥಿತಿ ನಿರ್ಮಾಣವಾಯಿತು. ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.ರಾಜ್ಯಸಭೆಯಲ್ಲಿ ಎರಡು ಬಾರಿ ಕಲಾಪವನ್ನು ಮುಂದೂಡಿದ ಘಟನೆಯೂ ನಡೆಯಿತು.