ಗದಗ: ಚಿತ್ರನಟ ಯಶ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಗಳು ಸಂಭ್ರಮದಿಂದ ಕಟೌಟ್ ಕಟ್ಟಲು ಮುಂದಾಗಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಮೂವರು ದಾರುಣವಾಗಿ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ನಿನ್ನೆ ರಾತ್ರಿ ಸುಮಾರು 25 ಅಡಿ ಉದ್ಧದ ಕಟೌಟ್ ಕಟ್ಟುವ ವೇಳೆ ವಿದ್ಯುತ್ ತಂತಿಗೆ ಕಬ್ಬಿಣದ ಬಾರ್ ಸ್ಪರ್ಶಿಸಿ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ.ಮೃತರನ್ನು ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ನಾಲ್ವರ ಪೈಕಿ ಓರ್ವನನ್ನು ಲಕ್ಷೇಶ್ವರ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರೆ ಮತ್ತೆ ಮೂವರು ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.ಘಟಣಾ ಸ್ಥಳಕ್ಕೆ ಧಾವಿಸಿದ್ದ ಸ್ಥಳೀಯ ಶಾಸಕ ಚಂದ್ರು ಲಮಾಣಿ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.ಗಾಯಾಳುಗಳನ್ನು ಮಂಜುನಾಥ್ ಹರಿಜನ, ಪ್ರಕಾಶ ಮ್ಯಾಗೇರಿ, ದೀಪಕ ಹರಿಜನ ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್, ತಾವು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಅವರಿಂದ ದುರ್ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ಸಂತ್ರಸ್ತರಿಗೆ ಪರಿಹಾರ ಕೊಡಿಸಲು ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ.