ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಣ ಮೂರನೇ ಟಿ20 ಪಂದ್ಯವು ಇಂದು (ಜ.9) ನಡೆಯಲಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಮ್ಯಾಚ್ ಸರಣಿ ನಿರ್ಣಾಯಕ ಪಂದ್ಯ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು.
ಇನ್ನು ದ್ವಿತೀಯ ಟಿ20 ಪಂದ್ಯವನ್ನು ಆಸ್ಟ್ರೇಲಿಯಾ ತಂಡ 6 ವಿಕೆಟ್ಗಳಿಂದ ಗೆದ್ದುಕೊಂಡಿದೆ. ಇದೀಗ ಕೊನೆಯ ಟಿ20 ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು.
ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು 6 ವಿಕೆಟ್ಗಳಿಂದ ಸೋಲಿಸಿದ್ದ ಆಸ್ಟ್ರೇಲಿಯಾ, 2ನೇ ಪಂದ್ಯದಲ್ಲಿ 3 ರನ್ಗಳ ರೋಚಕ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ 190 ರನ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿಯನ್ನು ಗೆದ್ದುಕೊಂಡಿತು.
ಇದೀಗ ಏಕದಿನ ಸರಣಿ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಅದರಂತೆ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಟಿ20 ಪಂದ್ಯದಲ್ಲಿ ಆಸೀಸ್ ಪಡೆಯನ್ನು ಬಗ್ಗು ಬಡಿದು ಭಾರತ ತಂಡ ಸರಣಿ ಗೆಲ್ಲಲಿದೆಯಾ ಕಾದು ನೋಡಬೇಕಿದೆ.