ಬೆಂಗಳೂರು: ವುಮೆನ್ಸ್ ಪ್ರೀಮಿಯರ್ ಲೀಗ್ನ 11ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳಬೇಕಾದ ಅನಿವಾರ್ಯತೆ ಆರ್ಸಿಬಿ ತಂಡದ ಮುಂದಿದೆ.
ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲನುಭವಿಸಿದೆ. ವಿಶೇಷ ಎಂದರೆ ಇದು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಪಂದ್ಯ. ಮುಂದಿನ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಇನ್ನು ಯುಪಿ ವಾರಿಯರ್ಸ್ ವಿರುದ್ಧದ ಮೊದಲ ಪಂದ್ಯವನ್ನು ಆರ್ಸಿಬಿ ಕೇವಲ 2 ರನ್ಗಳಿಂದ ಗೆದ್ದುಕೊಂಡಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.