ತಿರುವನಂತಪುರಂ: ಕೇರಳ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ನ ಮುಖಂಡ ವಿ.ಡಿ.ಸತೀಶನ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ಸತೀಶನ್ ಅವರು ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಕಳೆದ ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕರಾಗಿದ್ದ ವಿ.ಡಿ.ಸತೀಶನ್ ಆರು ಬಾರಿ ಶಾಸಕರಾಗುವ ಮೂಲಕ ಕೇರಳ ವಿಧಾನಸಭೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಜನನಾಯಕನಾಗಿ ಹೆಸರು ಪಡೆದಿರುವ ಅವರು ಪರಊರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಈ ತಿಂಗಳ 4ರಂದು ಕೇರಳ ರಾಜ್ಯದ ವಿಧಾನಸಭೆಯ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ಪಕ್ಷದಲ್ಲಿ ಪೈಪೋಟಿಯಲ್ಲಿದ್ದರು. ಮುಖ್ಯಮಂತ್ರಿ ಆಯ್ಕೆಯಾಗಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವರಿಷ್ಠರು 10 ದಿನಗಳಿಗೂ ಹೆಚ್ಚು ಕಾಲ ಹರಸಾಹಸ ಪಟ್ಟಿದ್ದರು. ಇವರ ಜತೆ ಮುಖ್ಯಮಂತ್ರಿಯಾಗಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತೋರ್ವ ಪಕ್ಷದ ಹಿರಿಯ ಮುಖಂಡ ಮಾಜಿ ಗೃಹಸಚಿವ ರಮೇಶ್ ಚನ್ನಿತಲ ಪೈಪೋಟಿಯಲ್ಲಿದ್ದರು. ಇಂದು ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೆಲಂಗಾಣದ ಮುಖ್ಯಮಂತ್ರಿ ರೇವಂತ್ರೆಡ್ಡಿ, ಕೇರಳದ ಮಾಜಿ ಮುಖ್ಯಮಂತ್ರಿ ವಿಜಯನ್ ಪಿಣರಾಯ್, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ರಾಜೀವ್ ಚಂದ್ರಶೇಖರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ 20 ಮಂದಿ ಶಾಸಕರು ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕೇರಳಂ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣ



