ಬೆಂಗಳೂರು: ಮಾಜಿ ಸಚಿವ ಹಾಗು ಮಾಜಿ ವಿಧಾನಸಭೆ ಸ್ಪೀಕರ್ ದಾರದಹಳ್ಳಿ ಬೈರೇಗೌಡ ಚಂದ್ರೇಗೌಡ (87) ನಿಧನರಾಗಿದ್ದಾರೆ.
ಇಂದು ಮುಂಜಾನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಅವರು ಇಹಲೋಹ ತ್ಯಜಿಸಿದರು.
ಕೆಲವು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂದ್ರೇಗೌಡರು ಸಕ್ರಿಯ ರಾಜಕೀಯದಿಂದ ದೂರ ಉಳಿದಿದ್ದರು.
ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಪಾರ್ಥಿವ ಶರೀರದ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಗಣ್ಯರ ಸಂತಾಪ: ಹಿರಿಯ ರಾಜಕೀಯ ಮುತ್ಸದ್ಧಿ ಡಿ.ಬಿ.ಚಂದ್ರೇಗೌಡರ ನಿಧನಕ್ಕೆ ಆದಿಚುಂಚನಗಿರಿ ಮಠಾಧೀಶರಾದ ಡಾ. ನಿರ್ಮಲಾನಂದಸ್ವಾಮಿಜಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ, ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ, ಸಚಿವರಾದ ಶಿವರಾಜ್ ತಂಗಡಗಿ, ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಮಾಜಿ ಸಚಿವ ಸಿ.ಟಿ.ರವಿ, ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿ ಮೃತರು ಸಾಗಿಬಂದ ರಾಜಕೀಯ ಜೀವನದ ಹಾದಿಯನ್ನು ಸ್ಮರಿಸಿದ್ದಾರೆ.